ಬೆಂಗಳೂರು:ಫೆಬ್ರವರಿ 4: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ದಾಖಲಿಸಿರುವ ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಸಂಬಂಧ ಪ್ರಕರಣವನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಶಿವಕುಮಾರ್ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಆದರೆ ನ್ಯಾಯಾಲಯ ಸಿಬಿಐ ಪರ ವಕೀಲರ ಮನವಿ ಮೇರೆಗೆ ಒಂದು ವಾರ ಮುಂದೂಡಿದೆ.

ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ಅರ್ಜಿಯನ್ನು, ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ವಿಚಾರಣೆಗೆ ಬಂದಿತು.

ಸಿಬಿಐ ಪರ ವಕೀಲರು ಹಾಜರಾಗಿ ವಿಚಾರಣೆ ಮುಂದೂಡುವಂತೆ ಕೋರಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶಿವಕುಮಾರ್ ಪರ ಹಾಜರಾಗಿದ್ದ ಹಿರಿಯ ವಕೀಲರು, ಸಿಬಿಐ ಪರ ವಕೀಲರ ಗೈರು ಹಾಜರಿಗೆ ಅಸಮಾಧಾನ ವ್ಯಕ್ತಪಡಿಸಿದರು. ಅಂತೆಯೇ, ವಿಚಾರಣೆಯನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು. ಕೊನೆಗೆ ನ್ಯಾಯಪೀಠ, ಸಿಬಿಐ ಪರ ವಕೀಲರ ಮನವಿಯಂತೆ ವಿಚಾರಣೆಯನ್ನು ಇದೇ 10ಕ್ಕೆ ಮುಂದೂಡಿತು.

ಕಳೆದ ವಿಚಾರಣೆ ವೇಳೆ ಸಿ.ಎಚ್‌.ಜಾಧವ್‌, ‘ಶಾಸಕ ಡಿ.ಕೆ.ಶಿವಕುಮಾರ್ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾಗಿರುವ ಕಾರಣಕ್ಕಾಗಿ ಕಿರುಕುಳ ನೀಡಲಾಗುತ್ತಿದ್ದು ಅವರ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ. ಹತ್ತಿರವಾಗುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಹೇಗಾದರೂ ಮಾಡಿ ಅವರಿಗೆ ತೊಂದರೆ ನೀಡಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದರು.

‘ಅರ್ಜಿದಾರರು ಸಾರ್ವಜನಿಕ ಸೇವಕ. ಅವರ ವಿರುದ್ಧ ದಾಖಲಿಸಿರುವ ಈ ಪ್ರಕರಣದಲ್ಲಿ ಅವರ ಕುಟುಂಬದ ಸದಸ್ಯರೆಲ್ಲರ ಆದಾಯವನ್ನು ಪರಿಗಣಿಸಲಾಗಿದೆ. ಜಾಮೀನು ದೊರೆತ ಮೇಲೆ ಜಾರಿ ನಿರ್ದೇಶನಾಲಯದ ಮಾಹಿತಿ ಅನುಸಾರ ಸಿಬಿಐ ಕೇಸು ದಾಖಲಿಸಿದೆ. ಇದೆಲ್ಲಾ ಅರ್ಜಿದಾರರಿಗೆ ಕೇವಲ ಕಿರುಕುಳ ನೀಡಬೇಕೆಂಬ ದುರುದ್ದೇಶಪೂರಿತ ಕ್ರಮವಾಗಿದೆ’ ಎಂದೂ ಹೇಳಿದ್ದರು.

ಪ್ರಕರಣದ ವಿವರ:

‘ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ಕಲಂ 13 (2), 13 (1)(ಇ) ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್ 3ರಂದು ಪ್ರಕರಣ ದಾಖಲಿಸಿದೆ. ‘ಸಿಬಿಐ ದಾಖಲಿಸಿರುವ ಈ ಎಫ್‌ಐಆರ್‌ ಕಾನೂನು ಬಾಹಿರವಾಗಿದ್ದು ಇದನ್ನು ರದ್ದುಗೊಳಿಸಬೇಕು’ ಎಂದು ಕೋರಿ ಡಿ.ಕೆ ಶಿವಕುಮಾರ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು.

error: Content is protected !!