
ಮಾರ್ಗಸೂಚಿಯನುಸಾರ ಕಾರ್ಯನಿರ್ವಹಿಸಲು ಸೆಕ್ಟರ್ ಅಧಿಕಾರಿಗಳಿಗೆ ಸೂಚನೆ
ಕೊಪ್ಪಳ: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಕೊಪ್ಪಳ ಜಿಲ್ಲೆಯಲ್ಲಿ ವಿಧಾನಸಭಾ ಕ್ಷೇತ್ರವಾರು ನೇಮಿಸಲಾದ ಸೆಕ್ಟರ್ ಅಧಿಕಾರಿಗಳಿಗೆ ಮತ್ತು ಮಾಸ್ಟರ್ ಟ್ರೇನರ್‌ಗಳಿಗೆ ಚುನಾವಣಾ ಕರ್ತವ್ಯಗಳ ಹಾಗೂ ಇವಿಎಂ ವಿವಿಪ್ಯಾಟ್‌ಗಳ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮವು ಫೆಬ್ರವರಿ 23 ರಂದು ನಡೆಯಿತು.
ಆಡಿಟೋರಿಯಂ ಹಾಲನಲ್ಲಿ ನಡೆದ ತರಬೇತಿಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಮಾತನಾಡಿ, ಚುನಾವಣೆ ಪ್ರಕ್ರಿಯೆಯಲ್ಲಿ ಸೆಕ್ಟರ್ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದ್ದು, ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ ಒಟ್ಟು 1,322ಕ್ಕೂ ಅಧಿಕ ಮತದಾನ ಕೇಂದ್ರಗಳಿದ್ದು, ಒಬ್ಬ ಸೆಕ್ಟರ್ ಅಧಿಕಾರಿಯ ವ್ಯಾಪ್ತಿಗೆ ಕನಿಷ್ಟ ಹತ್ತು ಮತದಾನ ಕೇಂದ್ರಗಳು ಬರುತ್ತವೆ. ಮತಗಟ್ಟೆಗಳ ಸ್ಥಿತಿ-ಗತಿ, ಅಲ್ಲಿನ ಮೂಲಭೂತ ಸೌಕರ್ಯ ಮುಂತಾದ ಅಗತ್ಯ ಮಾಹಿತಿ ಸಂಗ್ರಹಿಸಿ, ಈ ಬಗ್ಗೆ ಜಿಲ್ಲಾ ಚುನಾವಣಾ ಶಾಖೆಗೆ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದರು.
ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳ ನಂತರ ಬರುವ ಸೆಕ್ಟರ್ ಅಧಿಕಾರಿಗಳ ಕಾರ್ಯ ಪ್ರಮುಖವಾಗಿದ್ದು, ಫ್ಲೈಯಿಂಗ್ ಸ್ಕ್ವಾಡ್ಸ್, ಆರ್.ಓ ಹಾಗೂ ಇತರೆ ಅಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಬೇಕು. ಚುನಾವಣಾ ಕರ್ತವ್ಯದ ಹಾಗೂ ಇವಿಎಂ ವಿವಿಪ್ಯಾಟ್‌ಗಳ ನಿರ್ವಹಣೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡು ಚುನಾವಣಾ ಕಾರ್ಯಕ್ಕೆ ಸಿದ್ದರಾಗಬೇಕು.

ಮತಯಂತ್ರಗಳ ಕಾರ್ಯ ನಿರ್ವಹಣೆ ಕುರಿತು ಯಾವುದೇ ಸಮಸ್ಯೆಗಳು ತಲೆದೋರಿದಲ್ಲಿ, ಕೂಡಲೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಅದನ್ನು ಸರಿಪಡಿಸಿಕೊಳ್ಳಬೇಕು. ನೀತಿ ಸಂಹಿತೆ ಜಾರಿಯಾದ ತಕ್ಷಣ 24 ಗಂಟೆಗಳ ಕಾಲ ಚುನಾವನಾ ಕಾರ್ಯಕ್ಕೆ ತಯಾರಾಗಿರಬೇಕು. ಕರ್ತವ್ಯದಲ್ಲಿ ಯಾವುದೇ ರೀತಿಯ ಲೋಪ ವೆಸಗಿದರೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿ ಹಾಗೂ ನಿರ್ದೇಶನಗಳ ಬಗ್ಗೆ ಸೆಕ್ಟರ್ ಅಧಿಕಾರಿಗಳು ಅರಿವು ಹೊಂದಿರಬೇಕು. ಈ ನಿಟ್ಟಿನಲ್ಲಿ ಚುನಾವಣಾ ಆಯೋಗದ ನಿರ್ದೇಶನಗಳನ್ನು ಸರಿಯಾಗಿ ಓದಿಕೊಳ್ಳಬೇಕು. ಮತಗಟ್ಟೆಯ ಅಧಿಕಾರಿಗಳು, ಸಹಾಯಕ ಸಿಬ್ಬಂದಿ, ಮತದಾನ ಸಿಬ್ಬಂದಿಗೆ ಚುನಾವಣಾ ಆಯೋಗವು ನೀಡಿರುವ ಮಾರ್ಗಸೂಚಿಗಳ ಕುರಿತು ಅರಿವು ಮೂಡಿಸಬೇಕು.
ಸೆಕ್ಟರ್ ಅಧಿಕಾರಿಗಳು ತೀವ್ರ ಕಟ್ಟೆಚ್ಚರದಿಂದ ಕರ್ತವ್ಯ ನಿರ್ವಹಿಸಬೇಕು. ಇವಿಎಂ ಹಾಗೂ ವಿವಿಪ್ಯಾಟಗಳ ಕಾರ್ಯ ನಿರ್ವಹಣೆಯನ್ನು ಸಹ ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಮತದಾನದ ಜಾಗೃತಿ ಕುರಿತಂತೆ ಜಿಲ್ಲೆಯಾದ್ಯಂತ ಪ್ರಾತ್ಯಕ್ಷಿತ ಕಾರ್ಯಕ್ರಮ ಹಮ್ಮಿಕೊಂಡು ಜನರಿಗೆ ಅರಿವು ಮೂಡಿಸಬೇಕು. ಅಣುಕು ಮತದಾನ ಕಾರ್ಯಕ್ರಮದಲ್ಲಿ ಕೇವಲ ಮಾದರಿ ಮತಯಂತ್ರಗಳನ್ನು ಬಳಕೆ ಮಾಡಲಾಗುತ್ತದೆ. ಈ ಬಗ್ಗೆ ಜನರಲ್ಲಿ ಯಾವುದೇ ಕೊಂದಲ ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕು. ಈ ಎಲ್ಲಾ ಕಾರ್ಯದ ಬಗ್ಗೆ ಮಾಸ್ಟರ್ ಟ್ರೇನರ್‌ಗಳು ಸೆಕ್ಟರ್ ಅಧಿಕಾರಿಗಳಿಗೆ ಸೂಕ್ತ ಮತ್ತು ಸಂಪೂರ್ಣ ಮಾಹಿತಿಯನ್ನು ನೀಡಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ರಾಹುಲ್ ರತ್ನಂ ಪಾಂಡೆಯ ಅವರು ಮಾತನಾಡಿ, ಮತ ಯಂತ್ರಗಳ ಕಾರ್ಯನಿರ್ವಹಣೆ ಬಗ್ಗೆ ಎಲ್ಲಾ ಸೆಕ್ಟರ್ ಅಧಿಕಾರಿಗಳು ಅರಿತು ಕೊಳ್ಳಬೇಕು. ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲನೆ ಮಾಡುವುದು, ಪೋಲಿಂಗ್ ಆಫೀಸರ್ ಹಾಗೂ ಇತರ ಚುನಾವಣಾ ಅಧಿಕಾರಿಗಳೊಂದಿಗೆ ಸಂಪರ್ಕ ಹೊಂದಿರಬೇಕು.
ಎಲ್ಲಾ ಆರ್‌ಓಗಳು ಸಹ ಚುನಾವಣಾ ಆಯೋಗದ ನಿರ್ದೇಶನಗಳನ್ನು ಓದಿಕೊಳ್ಳಬೇಕು ಎಂದು ಹೇಳಿದರು
ಜಿಲ್ಲೆಯ ಎಲ್ಲಾ ಮತದಾರರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಜಿಲ್ಲೆಯ 133 ಗ್ರಾಮ ಪಂಚಾಯತ್‌ಗಳಲ್ಲಿ ಒಂದೊಂದು ಮತದಾನದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಹೆಚ್ಚು ಜನ ಸೇರುವ ಹಾಗೂ ಜಾತ್ರೆ ನಡೆಯುವ ಗ್ರಾಮಗಳಲ್ಲಿ ವಿಶೇಷ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ, ಉಪವಿಭಾಗಾಧಿಕಾರಿಗಳಾದ ಬಸವಣ್ಣೆಪ್ಪ ಕಲಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಟಿ.ಕೃಷ್ಣಮೂರ್ತಿ ಸೇರಿದಂತೆ ವಿಧಾನಸಭಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಿಗೆ ನೇಮಕಗೊಂಡಿರುವ ಸೆಕ್ಟರ್ ಅಧಿಕಾರಿಗಳು ಹಾಗೂ ಮಾಸ್ಟರ್ ಟ್ರೇನರ್‌ಗಳು, ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿದ್ದರು.
ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಹಾಗೂ ವಿಧಾನಸಭಾ ಚುನಾವಣೆ ಸಂಬಂಧ ಮಾಸ್ಟರ್ ಟ್ರೇನರ್ ನೇಮಕ ಮಾಡಲಾಗಿರುವ ಅಧಿಕಾರಿಗಳು, ಚುನಾವಣಾ ಕರ್ತವ್ಯಗಳ ಹಾಗೂ ಇವಿಎಂ ವಿವಿಪ್ಯಾಟ್‌ಗಳ ನಿರ್ವಹಣೆ ಬಗ್ಗೆ ಸೆಕ್ಟರ್ ಅಧಿಕಾರಿಗಳಿಗೆ ವಿವರವಾಗಿ ತರಬೇತಿ ನೀಡಿದರು.