
ದಾವಣಗೆರೆ, ಫೆಬ್ರವರಿ 27: ಆಮ್ ಆದ್ಮಿ ಪಕ್ಷದ ರಾಜ್ಯಮಟ್ಟದ ಸಮಾವೇಶ ಮಾರ್ಚ್ 4ಕ್ಕೆ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.
ಸೋಮವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಮಾರ್ಚ್ 4ರ ಬೆಳಗ್ಗೆ 11 ಗಂಟೆಗೆ ಸಮಾವೇಶ ಆರಂಭಗೊಳ್ಳಲಿದೆ. ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯದಲ್ಲಿ ಇದುವರೆಗೆ ಆಡಳಿತ ನಡೆಸಿರುವ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ವಜನರಿಗೆ ಸಮಬಾಳು ಕೊಟ್ಟಿಲ್ಲ. ರೈತರಿಗೆ ಯಾವುದೇ ಅನುಕೂಲ ಮಾಡಿಕೊಟ್ಟಿಲ್ಲ. ಚುನಾವಣೆ ಬಂದಿದೆ ಎಂಬ ಕಾರಣಕ್ಕೆ ರಾಜ್ಯದ ಜನರಿಗೆ ಸುಳ್ಳು ಹೇಳಿಕೊಂಡು ತಿರುಗಾಡುತ್ತಿರುವ ಈ ಪಕ್ಷದ ನಾಯಕರಿಗೆ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದರು.
ದೆಹಲಿ ಹಾಗೂ ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷದ ಜನರ ನಾಡಿಮಿಡಿತ ಅರಿತು ಕೆಲಸ ಮಾಡುತ್ತಿದೆ. ಚುನಾವಣೆಗೆ ಮುನ್ನ ಘೋಷಣೆ ಮಾಡಿದ್ದ ಭರವಸೆಗಳನ್ನು ಈಡೇರಿಸುತ್ತಿದೆ. ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುತ್ತಿದೆ. ಎಎಪಿ ಪಕ್ಷ ಘೋಷಿಸಿದ ಯೋಜನೆಗಳನ್ನು ಟೀಕಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರೇ ಈಗ ಘೋಷಿಸುತ್ತಿದ್ದಾರೆ. ವಿನಾಕಾರಣ ಆಮ್ ಆದ್ಮಿ ಪಕ್ಷದ ಮೇಲೆ ದ್ವೇಷದ ರಾಜಕಾರಣವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು.
ಜೆಸಿಬಿ ಪಕ್ಷಗಳೆಂದು ಕರೆಯಿಸಿಕೊಳ್ಳುವ ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಕುರಿತು ಜನರಿಗೆ ಅಸಹನೆ ಬಂದಿದೆ. ಮುಂಬರುವ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಗಣನೀಯ ಸ್ಥಾನಗಳನ್ನು ಗೆಲ್ಲಲಿದೆ. ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳುವುದಿಲ್ಲ. ಆದರೆ, ಉಳಿದ ಪಕ್ಷಗಳಿಗೆ ತೀವ್ರ ಪೈಪೋಟಿ ನೀಡುತ್ತೇವೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ರುದ್ರಯ್ಯ ನವಲಿ ಹಿರೇಮಠ್, ಗುರುಮೂರ್ತಿ, ಚಂದ್ರು ಬಸವಂತಪ್ಪ, ಗೋವಿಂದ್ ರಾಜ್, ರಾಜಶೇಖರ್, ಶ್ರೀಧರ್ ಮತ್ತಿತರರು ಹಾಜರಿದ್ದರು.