ಕೊಪ್ಪಳ: ರಾಜ್ಯದ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ರಾಜ್ಯಮಟ್ಟದ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ ಜ.3 ರಂದು ಬೆಂಗಳೂರಿನಲ್ಲಿ ಜರುಗಲಿದೆ ಎಂದು ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಗೌರವಾಧ್ಯಕ್ಷ ಕೆ.ರವೀಂದ್ರ ಶೆಟ್ಟಿ ತಿಳಿಸಿದ್ದಾರೆ.ನಗರದ ಕೆಯುಡಬ್ಲ್ಯೂಜೆ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು,

ರಾಜ್ಯದ ಅಲೆಮಾರಿ ಜನಾಂಗದ ಸರ್ವತೋಮುಖ ಅಭಿವೃದ್ಧಿಗಾಗಿ ಒಕ್ಕೂಟ ಸ್ಥಾಪಿಸಿ ಒಂದು ವರ್ಷವಾಗಿದ್ದು ಅದರ ಸವಿನೆನಪಿಗಾಗಿ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಸಾಹಿತ್ಯ, ಸಾಂಸ್ಕೃತಿಕ ಕಲೋತ್ಸವ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸೇರಿದಂತೆ ಅಲೆಮಾರಿ ಬದುಕು (ಅಂದು-ಇಂದು-ಮುಂದು) ವಿಚಾರ ಸಂಕೀರ್ಣದ ಮತ್ತು ಅಲೆಮಾರಿ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ, ನಿರ್ಣಯ ಮಂಡಿಸಿ ಸರ್ಕಾರಕ್ಕೆ ವರದಿ ನೀಡುವ ಕೆಲಸ ಮಾಡಲಾಗುತ್ತದೆ ಎಂದು ಹೇಳಿದರು.

ಅಲೆಮಾರಿ ಜನರ ಬಗ್ಗೆ ಇರುವ ಕಾಳಜಿಯಿಂದ ಈ ಒಕ್ಕೂಟ ಸ್ಥಾಪನೆಯಾಗಿದ್ದು, ಇದರಲ್ಲಿ 46 ಜಾತಿಗಳ ಜನರಿಗೆ ಪ್ರಾಮುಖ್ಯತೆ ನೀಡಲಾಗಿದೆ. ಈ ಎಲ್ಲ ಜಾತಿಯ ಕುಲಶಾಸ್ತ್ರೀಯ ಅಧ್ಯಯನ ಮತ್ತು ಪ್ರತ್ಯೇಕ ಮೀಸಲಾತಿ ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು, ಇನ್ನೂ ರಾಜ್ಯದ ಪ್ರತಿ ಜಿಲ್ಲೆಯಲ್ಲಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರ ಸಮೀಕ್ಷೆ ಹಾಗೂ ಅವರು ವಾಸಿಸಿರುವ ಸರ್ಕಾರದ ಜಾಗದಲ್ಲಿ ಅವರಿಗೆ ಜೀವನ ನಡೆಸಲು ಸರ್ಕಾರ ಅವಕಾಶ ನೀಡಬೇಕು ಎಂದು ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜ.3 ರಂದು ಬೆ.9:30 ಕ್ಕೆ ಆರಂಭವಾಗಲಿದ್ದು ಸ.5:30 ಸಮಾರೋಪ ಸಮಾರಂಭ ಜರುಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಒಕ್ಕೂಟದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ 9060004406 ಗೆ ಕರೆ ಮಾಡಿ ಮಾಹಿತಿ ಪಡೆಯಲು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಅಲೆಮಾರಿ ಮತ್ತು ಅರೆ ಅಲೆಮಾರಿ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಕೆ.ಶ್ರೀನಿವಾಸ ಕಟ್ಟಿಮನಿ ಉಪಸ್ಥಿತರಿದ್ದರು.

error: Content is protected !!