ಸಮನ್ವಯತೆಯಿಂದ ಕಾಯನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ

ಕೊಪ್ಪಳ: ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಮತದಾರರಿಗೆ ಆಮಿಷ ಒಡ್ಡಲು ವಿವಿಧ ಉಡುಗೊರೆಗಳನ್ನು ನೀಡುತ್ತಿರುವ ಪ್ರಕರಣಗಳು ಸೋಶಿಯಲ್ ಮೀಡಿಯಾ, ದಿನಪತ್ರಿಕೆಗಳಲ್ಲಿ, ಟಿವಿ ವಾಹಿನಿಗಳಲ್ಲಿ, ವಾಟ್ಸಾಪ್ ಮುಖಾಂತರ ವರದಿಯಾದಲ್ಲಿ ಸಂಬಂಧಪಟ್ಟ ಚುನಾವಣಾಧಿಕಾರಿಗಳು, ತಹಶೀಲ್ದಾರರು ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಕೂಡಲೇ ಸ್ವಯಂಪ್ರೇರಿತವಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನಿಯಮಾನುಸಾರ ಕ್ರಮಕೈಗೊಳ್ಳಬೇಕು. ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ. ಸುಂದರೇಶ ಬಾಬು ಅವರು ಸೂಚಿಸಿದರು.

ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಪೂರ್ವಸಿದ್ಧತಾ ಕಾರ್ಯಗಳ ಕುರಿತು ಚರ್ಚಿಸಲು ಮಾರ್ಚ 18ರಂದು ಜಿಲ್ಲಾಡಳಿತ ಭವನದ ಕೇಸ್ವಾನ್ ಸಭಾಂಗಣದಲ್ಲಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮುಖದಲ್ಲಿ ಅಬಕಾರಿ ಉಪ ಆಯುಕ್ತರು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಎಲ್ಲಾ ತಹಶೀಲ್ದಾರರು, ಎಲ್ಲಾ ತಾಲ್ಲೂಕು ಪಂಚಾಯತ್‌ಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಇತರೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು.

ಚುನಾವಣೆ ಸಂಬಂಧ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಈಗಾಗಲೇ ನೀಡಿದ ನಿರ್ದೇಶನಗಳನ್ನು ಪಾಲನೆ ಮಾಡಬೇಕು. ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳಿರುವ ಬಗ್ಗೆ ಪುನಃ ಪರಿಶೀಲಿಸಿ ಖಚಿತಪಡಿಸಿಕೊಳ್ಳಲು ಗ್ರಾಮೀಣ ಪ್ರದೇಶಗಳಲ್ಲಿನ ಮತಗಟ್ಟೆಗಳಿಗೆ ಸಂಬಂಧಿಸಿದಂತೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ನಗರ ಪ್ರದೇಶಗಳಲ್ಲಿನ ಮತಗಟ್ಟೆಗಳಿಗೆ ಸಂಬಂಧಿಸಿದಂತೆ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು.

ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳನ್ನು ಮುಕ್ತ, ಶಾಂತ ಹಾಗೂ ನ್ಯಾಯಸಮ್ಮತವಾಗಿ ಕೈಗೊಳ್ಳುವ ಸಂಬಂಧ ನೇಮಿಸಲಾಗಿರುವ ಫ್ಲೈಯಿಂಗ್ ಸ್ಕ್ವಾಡ್‌ತಂಡ, ಚೆಕ್‌ಪೋಸ್ಟ್ ತಂಡ, ವಿಡಿಯೋ ಸರ್ವಲೈನ್ಸ್ ತಂಡ, ಅಕೌಂಟಿಂಗ್ ತಂಡಗಳು ಮತ್ತು ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಸಂಪೂರ್ಣವಾಗಿ ಚುನಾವಣಾ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಇದೆ ವೇಳೆ ಜಿಲ್ಲಾಧಿಕಾರಿಗಳು ನಿರ್ದೇಶನಗಳನ್ನು ನೀಡಿದರು.

ವಿಧಾನಸಭೆ ಚುನಾವಣೆಯ ನಿಮಿತ್ತ ಕೊಪ್ಪಳ ಜಿಲ್ಲೆಯ 14 ಸ್ಥಳಗಳಲ್ಲಿ ಚೆಕ್‌ಪೋಸ್ಟ್ ನಿರ್ಮಿಸಲು ಮತ್ತು ಸದರಿ ಚೆಕ್‌ಪೋಸ್ಟ್ಗಳ ಮೂಲಕ ಅನಧಿಕೃತ ಮದ್ಯೆ ಮತ್ತು ಇತರೆ ಸಾಗಣೆ ಕುರಿತು ನಿಗಾವಹಿಸಲು ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ ಮತ್ತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಈಗಾಗಲೇ ನೇಮಿಸಲಾಗಿರುವ ಚೆಕ್‌ಪೋಸ್ಟ್ ತಂಡಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ ಅವರು ಮಾತನಾಡಿ, ಸಾರ್ವಜನಿಕ ಸಭೆ- ಸಮಾರಂಭಗಳಿಗೆ, ರ‍್ಯಾಲಿಗಳಿಗೆ, ಮೆರವಣಿಗೆಗಳಿಗೆ, ಲೌಡ್‌ಸ್ಪೀಕರ್‌ಗಳ ಬಳಕೆಗಾಗಿ ಕಡ್ಡಾಯವಾಗಿ ಅನುಮತಿ ಪಡೆಯಲು ರಾಜಕೀಯ ಪಕ್ಷಗಳಿಗೆ ತಿಳಿಸಲು ಹೇಳಿದರು. ಯಾವುದೇ ಉಲ್ಲಂಘನೆಗಳು ಕಂಡು ಬಂದಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆಯನ್ವಯ ಪ್ರಕರಣ ದಾಖಲಿಸಲು ಚುನಾವಣಾಧಿಕಾರಿಗಳಿಗೆ ಮತ್ತು ಪೊಲೀಸ್ ಇನ್ಸ್ಪೆಕ್ಟರ್‌ಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಮಟ್ಟದ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳು ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರು ಮಾತನಾಡಿ, ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಚುನಾವಣಾಧಿಕಾರಿಗಳಿಗೆ ಮತ್ತು ಎಲ್ಲಾ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ವಿಧಾನಸಭಾ ಕ್ಷೇತ್ರಗಳ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚುನಾವಣೆ ನಿಮಿತ್ತ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಮತ್ತು ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಸಭೆ ಸಮಾರಂಭಗಳು, ಚುನಾವಣಾ ರ‍್ಯಾಲಿಗಳ ಸಂದರ್ಭದಲ್ಲಿ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಂದ ಅನುಮತಿ ಪಡೆದು ಬ್ಯಾನರ್‌ಗಳನ್ನು ಮತ್ತು ಫ್ಲೆಕ್ಸ್ಗಳನ್ನು ಅಳವಡಿಸುವಂತೆ ತಿಳಿಸಲು ಮತ್ತು ಬ್ಯಾನರ್, ಫ್ಲೆಕ್ಸ್ಗಳನ್ನು ಅಳವಡಿಸಲು ಅಧೀಕೃತ ಸ್ಥಳಗಳನ್ನು ಅಧಿಸೂಚಿಸಲು ಮತ್ತು ಬ್ಯಾನರ್, ಫ್ಲೆಕ್ಸ್ಗಳನ್ನು ಅಳವಡಿಸಲು ಎಲ್ಲರಿಗೂ ಸಮನಾದ ಅವಕಾಶಗಳನ್ನು ಕಲ್ಪಿಸಲು ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಇದೆ ವೇಳೆ ಸೂಚಿಸಲಾಯಿತು.


ವಿಡಿಯೋ ಸಂವಾದದಲ್ಲಿ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ, ಸಹಾಯಕ ಆಯುಕ್ತರಾದ ಬಸವಣ್ಣೆಪ್ಪ ಕಲಶೆಟ್ಟಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಮೀರ್ ಮುಲ್ಲಾ, ಡಿಎಸ್ಪಿ ಶರಣಬಸಪ್ಪ ಸುಭೇದಾರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕಾವ್ಯರಾಣಿ ಪಿ ಕೆ ಹಾಗೂ ಇನ್ನೀತರ ಅಧಿಕಾರಿಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!