ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಅಥವಾ ಕೊಪ್ಪಳ, ಬಾಗಲಕೋಟೆ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಉಸ್ತುವಾರಿ ಸದಸ್ಯರಾದ ಶೇಖರಗೌಡ ಜಿ ರಾಮತ್ನಾಳ (ದೂ.ಸಂ: 9632447589) ಅವರನ್ನು ಸಂಪರ್ಕಿಸುವಂತೆ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಹಕಾರ ನೀಡುವಂತೆ ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಕಾಯ್ದೆ-2005ರಡಿಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ಥಾಪಿತವಾಗಿದ್ದು, ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣದಲ್ಲಿ ದೂರುಗಳನ್ನು ಸ್ವೀಕರಿಸುವ, ಸ್ವ ಪ್ರೇರಣೆಯಿಂದ ದೂರು ದಾಖಲಿಸಿಕೊಳ್ಳುವ ಹಾಗೂ ಸಿವಿಲ್ ನ್ಯಾಯಾಲಯದಂತೆ ಕಾರ್ಯ ನಿರ್ವಹಿಸುವ ಅಧಿಕಾರ ಹೊಂದಿದೆ.
ಈ ಆಯೋಗದ ಸದಸ್ಯರು ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳನ್ನು ಆಯಾ ಸ್ಥಳೀಯ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಹಾಗೂ ಸುಲಲಿತವಾಗಿ ಕಾರ್ಯನಿರ್ವಹಿಸಲು ಮತ್ತು ಸಂತ್ರಸ್ಥ ಮಕ್ಕಳಿಗೆ ಪರಿಹಾರವನ್ನು ಸಕಾಲದಲ್ಲಿ ಲಭ್ಯವಾಗಲು ಅನುಕೂಲವಾಗುವಂತೆ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸದಸ್ಯರುಗಳನ್ನು ಈಗಾಗಲೇ ನೇಮಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.