
ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಆಗಮಿಸಲಿದ್ದು, ಕೊಪ್ಪಳ, ರಾಯಚೂರು, ಕಲಬುರಗಿಯಲ್ಲಿ ಭರ್ಜರಿ ಪ್ರಚಾರ ಮಾಡಲಿದ್ದಾರೆ.
ಮೊದಲಿಗೆ ಹನುಮನ ಜನ್ಮ ಭೂಮಿ ಕೊಪ್ಪಳದಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರಚಾರ ಮಾಡಲಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಗಂಗಾವತಿ ಬಿಜೆಪಿ ಅಭ್ಯರ್ಥಿ ಪರಣ್ಣ ಮುನವಳ್ಳಿ ಪರ ಪ್ರಚಾರ ಕೈಗೊಳ್ಳಲಿದ್ದಾರೆ. ನಂತರ ಗಂಗಾವತಿ ನಗರಕ್ಕೆ ಯೋಗಿ ಆದಿತ್ಯನಾಥ್ ಭೇಟಿ ಕೊಡಲಿದ್ದು, ಗಂಗಾವತಿಯ ತಾಲೂಕು ಕ್ರೀಡಾಂಗಣದಲ್ಲಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಸಿಎಂ ಯೋಗಿ ಆದಿತ್ಯನಾಥ್, ಲಖನೌನಿಂದ ಜಿಂದಾಲ್ ಏರ್‌ಪೋರ್ಟ್‌ಗೆ ಆಗಮಿಸಿ ಜಿಂದಾಲ್‌ನಿಂದ ಹೆಲಿಕಾಪ್ಟರ್ ಮೂಲಕ ಬೆಳಗ್ಗೆ 11 ಗಂಟೆಗೆ ಗಂಗಾವತಿಗೆ ಆಗಮಿಸಲಿದ್ದಾರೆ. ಗಂಗಾವತಿಯಲ್ಲಿ ಸಮಾವೇಶ ಮುಗಿಸಿ ಬಳಿಕ ರಾಯಚೂರಿಗೆ ತೆರಳಲಿದ್ದಾರೆ. ಬಳಿಕ ಗಡಿ ಜಿಲ್ಲೆ ರಾಯಚೂರಿನಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಶಿವರಾಜ್ ಪಾಟೀಲ್ ಪರ ಪ್ರಚಾರ ಮಾಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ರಾಯಚೂರು ನಗರಕ್ಕೆ ಯೋಗಿ ಭೇಟಿ ನೀಡಲಿದ್ದು, ನಗರದ ಕೃಷಿ ವಿವಿ ಮೈದಾನದಲ್ಲಿ ಒಂದು ಗಂಟೆ ಕಾಲ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶದಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಸಮಾವೇಶದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಯೋಗಿ ಭಾಷಣ ಮಾಡಲಿದ್ದಾರೆ.
ಕಲಬುರಗಿಯಲ್ಲಿ ಮತಬೇಟೆ:
ಕಲಬುರಗಿ ಜಿಲ್ಲೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್, ಆಳಂದ ಶಾಸಕ ಸುಭಾಷ್ ಗುತ್ತೇದಾರ್ ಪರ ಪ್ರಚಾರ ನಡೆಸಲಿದ್ದಾರೆ. ಚಿತ್ತಾಪುರ, ಆಳಂದ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಮಧ್ಯಾಹ್ನ 3ಕ್ಕೆ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿದೆ. ಸಂಜೆ 4.30ಕ್ಕೆ ಆಳಂದ ಪಟ್ಟಣದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ.