ಕೊಪ್ಪಳ : ಈಗಾಗಲೇ ಎಲ್ಲಾ 5 ವಿಧಾನಸಭಾ ಕ್ಷೇತ್ರಗಳಿಗೆ ವೋಟರ್ ಸ್ಲಿಪ್ ಮತ್ತು ಮತದಾನದ ಮಾರ್ಗದರ್ಶಿ ಕೈಪಿಡಿಗಳನ್ನು ಪೂರೈಸಲಾಗಿದ್ದು ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಇರುವ ಎಲ್ಲಾ ಮತದಾರರಿಗೂ ವಿತರಿಸಲು ಸೂಕ್ತ ಕ್ರಮಕೈಗೊಳ್ಳುವಂತೆ  ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಸೂಚನೆ ನೀಡಿದರು.

ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023ರ ಹಿನ್ನಲೆಯಲ್ಲಿ ಮೇ 02ರಂದು   ಜಿಲ್ಲಾಡಳಿತ ಭವನದಲ್ಲಿನ ಕೇಸ್ವಾನ್ ಹಾಲನಲ್ಲಿ ಕ್ಷೇತ್ರ  ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಮತಗಟ್ಟೆಗಳಲ್ಲಿ ಮೂಲಭೂತ ವ್ಯವಸ್ಥೆಯ ಬಗ್ಗೆ ಜಿಲ್ಲಾಧಿಕಾರಿಗಳು ವಿಧಾನಸಭಾ ಕ್ಷೇತ್ರವಾರು ಮಾಹಿತಿ ಪಡೆದರು. ಬಳಿಕ ಮಾತನಾಡಿ, ಮೇ 10 ರಂದು ಮತದಾನ ನಡೆಯಲಿದ್ದು, ಕೊಪ್ಪಳ ಜಿಲ್ಲೆಯ ಎಲ್ಲಾ 1322 ಮತಗಟ್ಟೆಗಳಲ್ಲಿ ಅಗತ್ಯವಾದ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್, ನೆರಳು, ಮಾತ್ರವಲ್ಲದೇ ವಿಕಲಚೇತನರಿಗೆ ಅಗತ್ಯವಿರುವ ವೀಲ್ ಚೇರ್, ರಾಂಪ್ ಇತ್ಯಾದಿ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಹಾಗೂ ಸೂಕ್ತ ಆರೋಗ್ಯ ಸೇವೆಗಳನ್ನು ಒದಗಿಸುವಂತೆ ಇದೆ ವೇಳೆ ಜಿಲ್ಲಾಧಿಕಾರಿಗಳು ಸೂಚನೆ‌ ನೀಡಿದರು.

ಮತದಾರರ ಸಹಾಯ ಕೇಂದ್ರದ ಬಗ್ಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮತದಾನ ನಡೆಯುವ ದಿನದಂದು ಮತದಾರರಿಗೆ ಮತದಾನಕ್ಕೆ ಸಹಾಯವಾಗಲು ಸಹಾಯ ಕೇಂದ್ರಗಳನ್ನು ಸ್ಥಾಪಿಸುವಂತೆ ಹಾಗೂ ಮತದಾರರ ಮಾರ್ಗದರ್ಶಿ ಬಿತ್ತಿಪತ್ರಗಳನ್ನು ಅಳವಡಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ, ಸಿವಿಜಿಲ್ ಪ್ರಕರಣಗಳನ್ನು ನಿಗದಿತ ಸಮಯದಲ್ಲಿ ವಿಲೇವಾರಿ ಮಾಡುವಂತೆ ಮತ್ತು ಎಲ್ಲಾ ಮತಗಟ್ಟೆ ಸಿಬ್ಬಂದಿಯು ಕಡ್ಡಾಯವಾಗಿ ಅಂಚೆ ಮತದಾನ ಮಾಡಲು ಕ್ರಮ ಕೈಗೊಳ್ಳುವಂತೆ ಚುನಾವಣಾಧಿಕಾರಿಗಳಿಗೆ ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ,‌ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ಚುನಾವಣಾ ಶಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

error: Content is protected !!