ಕೊಪ್ಪಳ ಮೇ 22 : ಜಿಲ್ಲೆಯಲ್ಲಿ ಮೇ 23ರಿಂದ ಜೂನ್ 03ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಆದೇಶ ಹೊರಡಿಸಿದ್ದಾರೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಿಗದಿತ ದಿನಾಂಕದ ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಪದವಿ ಪೂರ್ವ ಕಾಲೇಜು, ಯಲಬುರ್ಗಾದ ಸರಕಾರಿ ಪದವಿ ಪೂರ್ವ ಕಾಲೇಜು, ಕುಷ್ಟಗಿಯ ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಗಂಗಾವತಿಯ ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮತ್ತು ಸರಕಾರಿ ಎಸ್‌.ಎಂ.ಎನ್.ಎಂ ಬಾಲಕಿಯರ ಪದವಿ ಪೂರ್ವ ಕಾಲೇಜು, ಈ ಐದು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ತಡೆಗಟ್ಟಲು ಸಿ.ಆರ್.ಪಿ.ಸಿ 1973 ಕಲಂ 144ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ, ಮೊಬೈಲ್ ಪೇಜರ್, ಜಿರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ವಿಧ್ಯಾರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನೂಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರದ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

error: Content is protected !!