ನೀರನ್ನು ಕಡ್ಡಾಯ ಪರೀಕ್ಷೆಗೊಳಪಡಿಸಿಯೇ ಸಾರ್ವಜನಿಕರಿಗೆ ಪೂರೈಸಬೇಕು
ಕೊಪ್ಪಳ ಜೂನ್ 19: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರ ಪ್ರಧಾನ ಕಾರ್ಯದರ್ಶಿಗಳಾದ ಟಿ.ಕೆ.ಅನಿಲ್ ಕುಮಾರ ಅವರ ಅಧ್ಯಕ್ಷತೆಯಲ್ಲಿ ಜೂನ್ 19ರಂದು ಜಿಲ್ಲಾ ಪಂಚಾಯತ್ ಕಚೇರಿಯ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಈ ವೇಳೆ ಮಾತನಾಡಿದ ಅವರು, ಎಲ್ಲ ಹಳ್ಳಿಗಳಲ್ಲಿನ ಕೊಳವೆಬಾವಿಗಳು, ವಾಟರ್ ಟ್ಯಾಂಕ್‌ಗಳು ಮತ್ತು ಕೆರೆಗಳಲ್ಲಿನ ನೀರನ್ನು ಕಾಲಕಾಲಕ್ಕೆ ಪರೀಕ್ಷೆಗೊಳಪಡಿಸಿಯೇ ಸಾರ್ವಜನಿಕರಿಗೆ ಪೂರೈಸಬೇಕು. ಜಿಲ್ಲೆಯ ಎಲ್ಲಾ ಕಡೆಗಳಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸಬೇಕು. ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಒತ್ತು ಕೊಡಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಶಂಕಿತ ವಾಂತಿ ಬೇಧಿ ಪ್ರಕರಣಗಳು ವರದಿಯಾದ ಕಡೆಗಳಲ್ಲಿ ತೆರೆದ ಆರೋಗ್ಯ ಚಿಕಿತ್ಸಾ ಕೇಂದ್ರದಲ್ಲಿ ದಾಖಲಾದ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಚಿಕಿತ್ಸಾ ಕೇಂದ್ರದಲ್ಲಿ ಔಷಧಿ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಸ್ವಚ್ಛತೆ ಹಾಗೂ ಆರೋಗ್ಯ ಕ್ರಮಗಳ ಪಾಲನೆಗಾಗಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿ ಮೂಲಕ ಜನರಿಗೆ ಅರಿವು ಮೂಡಿಸುವಂತೆ ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಬೀಜಕ್ಕೆ ಯಾವುದೇ ರೀತಿಯ ಕೊರತೆಯಾಗದಿರಲಿ. ಬಿತ್ತನೆಗೆ ಹಾಗೂ ಈಗಾಗಲೇ ಬಿತ್ತನೆಯಾದ ಬೆಳೆಗಳಿಗೆ ಬೇಕಾಗುವ ರಸಗೊಬ್ಬರವನ್ನು ರೈತರ ಬೇಡಿಕೆಯಂತೆ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. ಬೆಳೆಗಳಲ್ಲಿ ಕಂಡುಬರುವ ರೋಗಗಳ ನಿಯಂತ್ರಣ, ಹತೋಟಿ ಕ್ರಮಗಳ ಕುರಿತು ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಸೂಕ್ತ ಜಾಗೃತಿ ಮೂಡಿಸಬೇಕು ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಸಕ್ತ ಮಳೆಗಾಲದಲ್ಲಿ ಜಾನುವಾರುಗಳಲ್ಲಿ ಕಂಡುಬರುವ ಕಾಲು-ಬಾಯಿ ರೋಗ ಹಾಗೂ ಇತರೆ ಕಾಯಿಲೆಗಳ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಕುರಿ, ಮೇಕೆ, ದನಕರುಗಳಿಗೆ ಶೇ 100ರಷ್ಟು ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಅವಶ್ಯವಿರುವ ಲಸಿಕೆಯನ್ನು ಕಾಯ್ದಿರಿಸಿಕೊಳ್ಳಬೇಕು. ಲಸಿಕೆಯ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು. ವಿಶೇಷವಾಗಿ ದನಕರುಗಳಿಗೆ ಚರ್ಮಗಂಟು ರೋಗದ ಮುನ್ನೆಚ್ಚರಿಕಾ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಬೇಕು. ಚರ್ಮಗಂಟು ರೋಗದಿಂದ ಜಾನುವಾರು ಕಳೆದುಕೊಂಡ ಸಂತ್ರಸ್ಥರಿಗೆ ಸಕಾಲಕ್ಕೆ ಪರಿಹಾರ ಮೊತ್ತ ಪಾವತಿಸಲು ಒತ್ತು ಕೊಡಬೇಕು ಎಂದು ಪಶುಪಾಲನಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲಾ ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕಗಳನ್ನು ವಿತರಣೆ ಮಾಡಬೇಕು. ಮಳೆಗಾಲ ಆರಂಭಗೊಂಡಿರುವ ಹಿನ್ನೆಲೆ ಶಾಲಾ ಕೊಠಡಿಗಳ ಸ್ಥಿತಿ-ಗತಿಗಳ ಬಗ್ಗೆ ಗಮನವಿರಿಸಬೇಕು. ದುರಸ್ತಿ ಅವಶ್ಯವಿದ್ದಲ್ಲಿ ಕ್ರಮ ವಹಿಸಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿತ್ತನೆಗೆ ಅವಶ್ಯವಿರುವ ಮೆಕ್ಕೆಜೋಳ, ಸಜ್ಜೆ, ಸೂರ್ಯಕಾಂತಿ, ತೊಗರಿ ಹಾಗೂ ಅಗತ್ಯ ಬೆಳೆಗಳ ಬಿತ್ತನೆ ಬೀಜಗಳನ್ನು ಹಾಗೂ ಗೊಬ್ಬರವನ್ನು ದಾಸ್ತಾನು ಮಾಡಲಾಗಿದ್ದು, ಯಾವುದೇ ರೀತಿಯ ಕೊರತೆ ಇಲ್ಲ ಎಂದು ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪಟ್ಟ ಟಿ.ಎಸ್ ಅವರು ಸಭೆಗೆ ಮಾಹಿತಿ ನೀಡಿದರು.
ಕಳೆದ ವರ್ಷ ಚರ್ಮಗಂಟು ರೋಗದಿಂದ ಜಿಲ್ಲೆಯಲ್ಲಿ ಒಟ್ಟು 809 ಜಾನುವಾರುಗಳು ಮೃತಪಟ್ಟಿವೆ. ಈ ಪೈಕಿ 774 ಜಾನುವಾರುಗಳಿಗೆ ಸಂಬಂಧಿಸಿದ 1,65,60,000 ರೂ. ಪರಿಹಾರ ಮೊತ್ತವನ್ನು ಸಂಬಂಧಿಸಿದ ಸಂತ್ರಸ್ಥರಿಗೆ ಜಮೆ ಮಾಡಲಾಗಿದೆ. ಬಾಕಿ ಉಳಿದ 35 ಜಾನುವಾರುಗಳ ಪರಿಹಾರಕ್ಕಾಗಿ ಕೇಂದ್ರ ಕಚೇರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುದಾನ ಬಂದ ತಕ್ಷಣ ಪರಿಹಾರ ಮೊತ್ತವನ್ನು ಸಂಬಂಧಿಸಿದ ಸಂತ್ರಸ್ಥರಿಗೆ ನೀಡಲಾಗುವುದು. ಈ ರೋಗದ ಮುಂಜಾಗೃತಿಗಾಗಿ ಎಲ್ಲಾ ದನ-ಕರುಗಳಿಗೆ ಎಲ್.ಎಸ್.ಡಿ ಲಸಿಕೆ ಹಾಕಲು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ಕುರಿ, ಮೇಕೆಗಳಿಗೆ ಇಟಿ ಮತ್ತು ಎಲ್ಲಾ ಜಾನುವಾರುಗಳಿಗೆ ಹೆಚ್.ಎಸ್ ಲಸಿಕಾ ನೀಡುವ ಕಾರ್ಯವು ಜಿಲ್ಲೆಯಲ್ಲಿ ಚಾಲ್ತಿಯಲ್ಲಿದೆ ಎಂದು ಪಶು ಇಲಾಖೆ ಉಪನಿರ್ದೇಶಕರಾದ ಡಾ ಹೆಚ್.ನಾಗರಾಜ ಅವರು ತಿಳಿಸಿದರು.
ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲ್ಯಾಬ್ ಟೆಕ್ನಿಷಿಯನ್‌ಗಳ ಕೊರತೆ ಇದ್ದು, ಹೊರಗುತ್ತಿಗೆ ಆಧಾರದ ಮೇಲೆ ಲ್ಯಾಬ್ ಟೆಕ್ನಿಷಿಯನ್‌ಗಳನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರದಿಂದ ಅನುಮತಿ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಅಲಕನಂದ ಮಳಗಿ ಅವರು ಕೋರಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯ ಚತುರ್ವೇದಿ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಂಜುನಾಥ, ಮುಖ್ಯ ಲೆಕ್ಕಾಧಿಕಾರಿ ಅಮಿನ್ ಅತ್ತಾರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ತಹಸೀಲ್ದಾರರು, ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.
