ಕೆಡಿಪಿ ಸಭೆಯಲ್ಲಿ ತಹಸೀಲ್ದಾರರಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ
ಕೊಪ್ಪಳ ಜುಲೈ 01 : ವೃದ್ಧಾಪ್ಯ, ವಿಧವಾ, ವಿಕಲಚೇತನರ ಹಾಗೂ ಇನ್ನಿತರ ಅರ್ಹ ಫಲಾನುಭವಿಗಳಿಗೆ ಸಕಾಲಕ್ಕೆ ಮಾಸಾಶನ ತಲುಪಿಸಲು ಎಲ್ಲಾ ರೀತಿಯ ಅಗತ್ಯ ಕ್ರಮವಹಿಸಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ತಹಸೀಲ್ದಾರರು ಸೇರಿದಂತೆ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಪಂ ಕಚೇರಿ ಸಭಾಂಗಣದಲ್ಲಿ ಜುಲೈ 1ರಂದು ನಡೆದ ತ್ರೆöಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಳೆಯು ನಿರೀಕ್ಷೆಯಂತೆ ಬೀಳುತ್ತಿಲ್ಲ. ಬರ ಪರಿಸ್ಥಿತಿ ಸಂಭವಿಸಿದಲ್ಲಿ ಗೋಶಾಲೆಗಳ ನಿರ್ಮಾಣಕ್ಕೆ ಜಾಗ ಗುರುತಿಸುವುದು, ಜಾನುವಾರುಗಳಿಗೆ ಬೇಕಾಗುವ ಮೇವು, ಕುಡಿವ ನೀರು ಒದಗಿಸುವಲ್ಲಿ ಯಾವುದೇ ರೀತಿಯ ಲೋಪವಾಗದ ಹಾಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಚಿವರು ತಹಸೀಲ್ದಾರರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಇದುವರೆಗೆ ಸ್ಮಶಾನವಿಲ್ಲದಿರುವ ಗ್ರಾಮಗಳ ಪಟ್ಟಿ ಮಾಡಿ ಅಂತಹ ಕಡೆಗಳಲ್ಲಿ ಕೂಡಲೇ ಸ್ಮಶಾನ ಮಂಜೂರಾತಿಗೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.
ಪ್ರಸ್ತಾವನೆ ಸಲ್ಲಿಸಿ: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಗಳು ಒಂದು ಮಾದರಿಯಡಿ ಸುವ್ಯವಸ್ಥಿತವಾಗಿರುವ ಹಾಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳ ಕೇಂದ್ರ ಸ್ಥಾನಗಳಲ್ಲಿ ಕಡ್ಡಾಯವಾಗಿ ಗ್ರಂಥಾಲಯ ನಿರ್ಮಾಣ, ಸಿಸಿ ರಸ್ತೆ, ಚರಂಡಿ ನಿರ್ಮಾಣ, ಶಾಲೆಗಳಿಗೆ ಕಾಂಪೌಂಡ್ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸುವುದಕ್ಕೆ ಪ್ರಸ್ತಾವನೆ ಸಿದ್ಧಪಡಿಸಿ ಜಿಲ್ಲಾ ಪಂಚಾಯತ್‌ಗೆ ಕಳುಹಿಸಿಕೊಡುವಂತೆ ಇದೆ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲಾ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜೆಜೆಎಂ ಕಾಮಗಾರಿ ಪೂರ್ಣಗೊಳಿಸಲು ಗಡುವು: ಜಲಜೀವನ ಮಿಷನ್ ಯೋಜನೆಯಡಿ ಕೊಪ್ಪಳ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಕಾಮಗಾರಿಗಳನ್ನು ಒಂದು ತಿಂಗಳೊಳಗಾಗಿ ಪೂರ್ಣಗೊಳಿಸುವಂತೆ ಕ್ರಮಕೈಗೊಳ್ಳಬೇಕು. ಜೆಜೆಎಂ ಕಾಮಗಾರಿಯ ಪೈಪಲೈನ ಕಾರ್ಯವನ್ನು ನಿಯಮಾನುಸಾರ ನಡೆಸಬೇಕು ಎಂದು ಸಚಿವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜೆಜೆಂ ಕಾಮಗಾರಿ ಸರಿಯಾಗಿ ನಡೆದಿಲ್ಲ. ಚರಂಡಿಯಲ್ಲಿ ಜೆಜೆಎಂ ಪೈಪ್ ಹಾಕಿ ಬಿಲ್ಲು ಪಾವತಿಸಲಾಗಿದೆ. ಸಿಸಿ ರೋಡ್ ಇದ್ದಲ್ಲಿ ಜೆಜೆಎಂ ಕಾಮಗಾರಿ ಬಳಿಕ ಸಿಸಿ ರೋಡ್ ದುರಸ್ತಿ ಕಾರ್ಯಕೈಗೊಂಡಿಲ್ಲ ಎನ್ನುವ ದೂರುಗಳಿವೆ. ಆದ್ದರಿಂದ ಈ ಬಗ್ಗೆ ಪರಿಶೀಲಿಸಲು ವಿಧಾನಸಭಾ ಕ್ಷೇತ್ರವಾರು ನೋಡಲ್ ಅಧಿಕಾರಿಗಳನ್ನು ಹಾಗೂ ಹೋಬಳಿವಾರು ಇತರ ಅಧಿಕಾರಿಗಳನ್ನು ನೇಮಕ ಮಾಡಿ ವರದಿ ಸಲ್ಲಿಸಲು ಕ್ರಮಕೈಗೊಳ್ಳಬೇಕು ಎಂದು ಸಿಇಓ ಅವರಿಗೆ ಸಚಿವರು ಸೂಚನೆ ನೀಡಿದರು.
ಶಾಲೆಗಳಿಗೆ ನೀರು ಪೂರೈಸಿ: ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ಮತ್ತು ಶಾಲೆಗಳಿಗೆ ಜೆಜೆಎಂ ಯೋಜನೆಯಡಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ, ಈ ಬಗ್ಗೆ ಮುಂದಿನ ಸಭೆಗೆ ಪ್ರಗತಿ ಮಾಹಿತಿಯನ್ನು ನೀಡಬೇಕು ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಶಾಲೆಗಳನ್ನು ಉನ್ನತೀಕರಿಸಿ: ಜಿಲ್ಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿರುವ ಪ್ರಾಥಮಿಕ ಶಾಲೆಗಳಲ್ಲಿ 7, 8 ಹಾಗೂ 9ನೇ ತರಗತಿ ಓದಲು ಪ್ರವೇಶವಕಾಶ ಇರುವ ಹಾಗೆ ಪ್ರಾಸ್ತಾವನೆ ಸಿದ್ದಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು. ಶಾಲೆಗಳ ಕೊಠಡಿ ನಿರ್ಮಾಣ, ಕಟ್ಟಡ ನಿರ್ಮಾಣ ಹಾಗೂ ಬಾಕಿ ಇರುವ ಎಲ್ಲ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಎಲ್ಲ ಶಾಲೆಗಳಲ್ಲಿ ಕಡ್ಡಾಯವಾಗಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಬೇಕು. ಆಯಾ ಕಡೆಗಳಲ್ಲಿ ಪದವಿ ಪೂರ್ವ ಶಿಕ್ಷಣದ ಸೌಕರ್ಯ ಒದಗಿಸಲು ಅನುಕೂಲವಾಗುವಂತೆ ಪ್ರೌಢಶಾಲೆಗಳನ್ನು ಉನ್ನತೀಕರಿಸಲು ಸಹ ತ್ವರಿತವಾಗಿ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸಚಿವರು ಸೂಚನೆ ನೀಡಿದರು.
ಉತ್ತಮ ಪರಿಸರ ನಿರ್ಮಾಣ ಮಾಡಿ: ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಮಾತನಾಡಿ, ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಕುಡಿಯುವ ನೀರಿನ ವ್ಯವಸ್ಥೆ, ಸುಸಜ್ಜಿತ ಅಡುಗೆ ಕೋಣೆ, ಭೋಜನಾಲಯ, ನೀರಿನ ಸಂಪರ್ಕ ಇರುವ ಶೌಚಾಲಯ ನಿರ್ಮಾಣ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯ ಒದಗಿಸಲು ಅಗತ್ಯ ಕ್ರಮ ವಹಿಸಬೇಕು. ಈ ಮೂಲಕ ಶಾಲೆಯಲ್ಲಿ ಉತ್ತಮ ಪರಿಸರ ಇರುವಂತೆ ನೋಡಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿದ್ಯಾರ್ಥಿಗಳಿಗೆ ಬಸ್ಸಿನ ಸೌಕರ್ಯ ಕಲ್ಪಿಸಿ: ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಅವರು ಮಾತನಾಡಿ, ಜಿಲ್ಲೆಯ ಅಳವಂಡಿ ಸೇರಿದಂತೆ ವಿವಿಧ ಭಾಗಗಳಿಂದ ಶಾಲಾ-ಕಾಲೇಜುಗಳಿಗೆ ಹೋಗಿ ಬರುವ ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಬಸ್ ಸೌಕರ್ಯ ಇಲ್ಲದಂತಾಗಿದ್ದು, ಈ ಬಗ್ಗೆ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು.
ಶಾಲಾ-ಕಾಲೇಜುಗಳ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಬರುವಂತಹ ಸ್ಥಳಗಳನ್ನು ಗುರುತಿಸಿ ವಿಶೇಷ ಕಾಳಜಿ ವಹಿಸಿ ಶಾಲಾವಧಿಯಲ್ಲಿ ಹೆಚ್ಚುವರಿ ಬಸ್ ಸೌಕರ್ಯ ಕಲ್ಪಿಸಬೇಕು ಎಂದು ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಇದೆ ವೇಳೆ ಸಚಿವರು ಸೂಚನೆ ನೀಡಿದರು. ಈಗಾಗಲೇ ಜಿಲ್ಲೆಯಲ್ಲಿ ಹೊಸ 38 ಬಸ್‌ಗಳಿಗೆ ಚಾಲನೆ ನೀಡಲಾಗಿದ್ದು, ಶಾಲಾ-ಕಾಲೇಜು ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ವಹಿಸಲಾಗುವುದು ಎಂದು ಕೆ.ಕೆ.ಆರ್.ಟಿ.ಸಿ ಅಧಿಕಾರಿಗಳು ಮಾಹಿತಿ ನೀಡಿದರು.
ಕಾಮಗಾರಿ ತ್ವರಿತಗೊಳಿಸಿ: ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಧೀನದಲ್ಲಿರುವ ವಸತಿ ಶಾಲೆಗಳು ಮತ್ತು ವಸತಿ ನಿಲಯಗಳ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರೈತರಿಗೆ ಸ್ಪಂದಿಸಿ: ಗಂಗಾಕಲ್ಯಾಣ ಯೋಜನೆಯಡಿ ಹೊಸ ಬೋರವೆಲ್ ಕೊರೆಯಿಸುವುದು, ಈಗಾಗಲೇ ಕೊರೆಯಿಸಿದ ಬೋರವೆಲ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯವನ್ನು ಅತ್ಯಂತ ತ್ವರಿತವಾಗಿ ಪೂರ್ಣಗೊಳಿಸಬೇಕು. ರೈತರ ಬೋರವೆಲ್‌ಗಳಿಗೆ 15 ರಿಂದ 20 ದಿನಗಳೊಳಗೆ ವಿದ್ಯುತ್ ಸಂಪರ್ಕ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ನಿಗಮಗಳು ಹಾಗೂ ಜೆಸ್ಕಾಂ ಅಧಿಕಾರಿಗಳು ಕೂಡಲೇ ಕ್ರಮಕೈಗೊಳ್ಳಬೇಕು. ಜಿಲ್ಲೆಯ ಕೆಲ ಭಾಗಗಳಲ್ಲಿ ಬೋರವೆಲ್‌ಗಳಿದ್ದರು ಸಹ ಟಿಸಿ ಸಮಸ್ಯೆಯಿಂದಾಗಿ ನೀರು ಸಿಗದ್ದಕ್ಕೆ ಬೆಳೆಗಳು ನಷ್ಟವಾಗಿವೆ. ಈ ಹಿನ್ನೆಲೆಯಲ್ಲಿ ಓವರ್ ಲೋಡ್ ಇರುವಂತಹ ಕಡೆಗಳಲ್ಲಿ ಸಾಮರ್ಥ್ಯಕ್ಕನುಸಾರ ಟಿಸಿ ಅಳವಡಿಸಲು ಕ್ರಮ ವಹಿಸುವಂತೆ ಸಚಿವರು ಜೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜೆಜೆಎಂ ಕಾಮಗಾರಿ ಪರಿಶೀಲನೆ: ಜಿಲ್ಲೆಯಲ್ಲಿನ ಜೆಜೆಎಂ ಕಾಮಗಾರಿಗಳ ಸ್ಥಿತಿಗತಿ ಕುರಿತು ಪರಿಶೀಲನಾ ಕಾರ್ಯ ನಡೆಸಿ ವರದಿ ಸಲ್ಲಿಸಲಾಗುವುದು. ಶಾಲಾ ಅಡುಗೆ ಕೋಣೆ, ಕೊಠಡಿ ನಿರ್ಮಾಣ ಹಾಗೂ ಇತರೆ ಕಾಮಗಾರಿಗಳನ್ನು ಕಾಲಮಿತಿಯೊಳಗೆ ನಡೆಸಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಸಂಸ್ಥೆಗಳೊಂದಿಗೆ ಸಭೆ ನಡೆಸಿ ಸೂಚಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಅವರು ಸಭೆಗೆ ಮಾಹಿತಿ ನೀಡಿದರು.
ಸರ್ಕಾರಕ್ಕೆ ಪ್ರಸ್ತಾವನೆ: ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಂ.ಎ.ರೆಡ್ಡೇರ್ ಮಾತನಾಡಿ, ಪ್ರಾಥಮಿಕ ವಿಭಾಗದಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿರುವ ಶಾಲೆಗಳನ್ನು ಪ್ರೌಢವಿಭಾಗಕ್ಕೆ ಉನ್ನತೀಕರಿಸಲು ಸರ್ಕಾರದ ಅನುಮತಿ ಬೇಕಾಗಿದ್ದು, ಅಂತಹ ಶಾಲೆಗಳನ್ನು ಗುರುತಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪ್ರಸ್ತುತ ತರಗತಿಗಳು ಆರಂಭಗೊಂಡಿದ್ದು, ಖಾಲಿ ಇರುವ 1910 ಶಿಕ್ಷಕರ ಹುದ್ದೆಗಳಲ್ಲಿ 1035 ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕಮಾಡಿಕೊಳ್ಳಲು ಸರ್ಕಾರದಿಂದ ಮಂಜೂರಾತಿ ನೀಡಲಾಗಿದೆ ಹಾಗೂ ಇನು 900 ಅತಿಥಿ ಶಿಕ್ಷಕರನ್ನು ಪಡೆದುಕೊಳ್ಳಲು ಹೆಚ್ಚುವರಿ ಬೇಡಿಕೆ ಸಲ್ಲಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ದೊಡ್ಡನಗೌಡ ಪಾಟೀಲ, ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು, ಜಿಪಂ ಸಿಇಓ ರಾಹುಲ್ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯ ಚತುರ್ವೇಧಿ, ಸಹಾಯಕ ಆಯುಕ್ತರಾದ ಬಸವಣ್ಣಪ್ಪ ಕಲಶೆಟ್ಟಿ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ, ಜಿಪಂ ಮುಖ್ಯ ಯೋಜನಾಧಿಕಾರಿ ಮಂಜುನಾಥ ಡಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.