
*
ಶಿವಮೊಗ್ಗ,: 17 ಜನವರಿ:ಪೌರಾಡಳಿತ ನಿರ್ದೇಶನಾಲಯ ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ವಿವಿಧ ಗ್ರೂಪ್ ‘ಸಿ’ ಹುದ್ದೆಗಳಿಗೆ ಕಡ್ಡಾಯ ಭಾಷಾ ಪರೀಕ್ಷೆ/ಸ್ಪರ್ಧಾತ್ಮಕ ಪರೀಕ್ಷೆಗಳು ಜ.21 ಮತ್ತು 22 ರಂದು ನಗರದ 4 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚಿಸಿದರು.
ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಸಂಬಂಧ ಮಾರ್ಗಾಧಿಕಾರಿಗಳು, ವೀಕ್ಷಕರು, ನಿರೀಕ್ಷಣಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜ.21 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ ಹಾಗೂ ಜ.22 ರಂದು ಬೆಳಿಗ್ಗೆ 10 ರಿಂದ 11.30 ರವರೆಗೆ ಮತ್ತು ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆವರೆಗೆ ಸಹ್ಯಾದ್ರಿ ಕಲಾ, ಸಹ್ಯಾದ್ರಿ ವಾಣಿಜ್ಯ, ಸಹ್ಯಾದ್ರಿ ವಿಜ್ಞಾನ ಹಾಗೂ ಕರ್ನಾಟಕ ಪಬ್ಲಿಕ್ ಶಾಲೆ ಒಟ್ಟು ನಾಲ್ಕು ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಒಟ್ಟು 714 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆಂದು ಮಾಹಿತಿ ನೀಡಿದರು.
ಈಗಾಗಲೇ ಪರೀಕ್ಷಾ ಕೇಂದ್ರಗಳಿಗೆ ಮಾರ್ಗಾಧಿಕಾರಿ, ವೀಕ್ಷಕರು ಹಾಗೂ ಸ್ಥಳೀಯ ನಿರೀಕ್ಷಣಾಧಿಕಗಳನ್ನು ನಿಯೋಜಿಸಲಾಗಿದೆ. ನಾಲ್ಕು ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಪರೀಕ್ಷೆಗಳು ಪಾರದರ್ಶಕವಾಗಿ, ಸುಗಮವಾಗಿ ನಡೆಯಲು ಅನುಕೂಲವಾಗುವಂತೆ ಸೆಕ್ಷನ್ 144 ರನ್ವಯ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ ಫಾಸಲೆವರೆಗಿನ ಪ್ರದೇಶದಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದ್ದು, ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಟೈಪಿಂಗ್, ಜೆರಾಕ್ಸ್, ಇತರೆ ಅಂಗಡಿಗಳು ನಿಷೇಧಾಜ್ಞೆ ಅವಧಿಯಲ್ಲಿ ತೆರೆಯುದನ್ನು ಪ್ರತಿಬಂಧಿಸಲಾಗಿದೆ.
ಪರೀಕ್ಷಾ ಕೇಂದ್ರಗಳಿಗೆ ಯಾವುದೇ ರೀತಿಯ ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ ಎಂದು ತಿಳಿಸಿದ ಅವರು ಕೆಪಿಎಸ್‍ಸಿ ಮಾರ್ಗಸೂಚಿಯನ್ವಯ ಅಭ್ಯರ್ಥಿಗಳಿಗೆ ಆಸನಗಳ ವ್ಯವಸ್ಥೆ ಮಾಡಿ, ಮೂಲಭೂತ ಸೌಕರ್ಯವನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹಾಗೂ ಪರೀಕ್ಷಾ ಮಾರ್ಗಸೂಚಿಯ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದ ಅವರು ಶಾಂತ ರೀತಿಯಲ್ಲಿ, ಸುವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡು ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಅಧಿಕಾರಿಗಳು ಹಾಜರಿದ್ದರು.