
ಕೊಪ್ಪಳ : ರಾಷ್ಟ್ರೀಯ ಮತದಾರರ ದಿನದಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಫೌಜಿಯಾ ತರನ್ನುಮ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಷ್ಟ್ರೀಯ ಮತದಾರರ ದಿನಾಚರಣೆ-2023ರ ನಿಮಿತ್ತ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಜನವರಿ 18 ರಂದು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಭಾರತ ಚುನಾವಣಾ ಆಯೋಗವು “ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ (Nothing like voting, I vote for sure) ಎಂಬ ಧ್ಯೇಯ ವಾಕ್ಯದೊಂದಿಗೆ ರಾಷ್ಟ್ರೀಯ ಮತದಾರರ ದಿನಾಚರಣೆ-2023 ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಚುನಾವಣಾ ಆಯೋಗ ನಿರ್ದೇಶನದಂತೆ ರಾಷ್ಟ್ರೀಯ ಮತದಾರರ ದಿನದಂದು ಕೊಪ್ಪಳ ಜಿಲ್ಲೆಯಾದ್ಯಂತ ಮತದಾನ ಜಾಗೃತಿ ಮೂಡಿಸಬೇಕಾಗಿದ್ದು, ಜಿಲ್ಲಾ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಂಡು ಜಿಲ್ಲೆಯ ಸಾರ್ವಜನಿಕ ಮತದಾರರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿ.ಪಂ ಯೋಜನ ನಿರ್ದೇಶಕರಾದ ಟಿ.ಕೃಷ್ಣಮೂರ್ತಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮೃಣಾಲ ಸಹಾಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರಾದ ಎಂ.ಎ ರಡ್ಡೇರ ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಿಡಿಪಿಓ, ಉಪನ್ಯಾಸಕರು, ಶಾಲಾ ಮಟ್ಟದ ದೈಹಿಕ ಮತ್ತು ಚಿತ್ರಕಲಾ ಶಿಕ್ಷಕರು ಉಪಸ್ಥಿತರಿದ್ದರು.